ಶಿಕ್ಷಣ ಕ್ಷೇತ್ರದ ಸಾಧಕರಿಗೆ ಸನ್ಮಾನ; ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ಅರಿವು
ಪುತ್ತೂರು, ಜೂನ್ 5: ವಿವೇಕಾನಂದ ಇಂಗ್ಲೀಷ್ ಮೀಡಿಯಂ ಸ್ಕೂಲ್, ಪುತ್ತೂರು ಇದರ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮೋನಪ್ಪ ಬಿ. ಅವರನ್ನು ಶಾಲಾ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಶಿಕ್ಷಣ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ವಿಶಿಷ್ಟ ಸೇವೆ, ಆಡಳಿತಾತ್ಮಕ ದಕ್ಷತೆ ಹಾಗೂ ವಿದ್ಯಾರ್ಥಿ ಕೇಂದ್ರಿತ ಕಾರ್ಯಗಳನ್ನು ಪರಿಗಣಿಸಿ ಶಾಲಾ ಸಂಚಾಲಕರಾದ ರವಿ ನಾರಾಯಣ ಎಂ. ಅವರ ನೇತೃತ್ವದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಮೋನಪ್ಪ ಬಿ. ಅವರು, ವಿವೇಕಾನಂದ ವಿದ್ಯಾವರ್ಧಕ ಸಂಘವು ಶಿಕ್ಷಣ ಕ್ಷೇತ್ರಕ್ಕೆ ನೀಡುತ್ತಿರುವ ಅಮೂಲ್ಯ ಕೊಡುಗೆಗಳನ್ನು ಶ್ಲಾಘಿಸಿದರು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವಲ್ಲಿ ಹಾಗೂ ಮೌಲ್ಯಾಧಾರಿತ ಶಿಕ್ಷಣದ ಮೂಲಕ ಉತ್ತಮ ಪ್ರಜೆಗಳನ್ನು ರೂಪಿಸುವಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಪಾತ್ರ ಶ್ಲಾಘನೀಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮವನ್ನು ಮೋನಪ್ಪ ಬಿ. ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ವಿಶ್ವ ಪರಿಸರ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ಪರಿಸರ ಸಂರಕ್ಷಣೆ ಇಂದಿನ ಅಗತ್ಯವಾಗಿದ್ದು, ವಿದ್ಯಾರ್ಥಿಗಳು ಚಿಕ್ಕ ವಯಸ್ಸಿನಿಂದಲೇ ಪರಿಸರದ ಬಗ್ಗೆ ಕಾಳಜಿ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಅಧ್ಯಕ್ಷೀಯ ಭಾಷಣ ಮಾಡಿದ ಶಾಲಾ ಸಂಚಾಲಕರಾದ ರವಿ ನಾರಾಯಣ ಎಂ. ಅವರು ಮಾನವನ ಚಟುವಟಿಕೆಗಳಿಂದ ಪ್ರಕೃತಿಗೆ ಉಂಟಾಗುತ್ತಿರುವ ಹಾನಿ ಹಾಗೂ ಪರಿಸರ ಸಂರಕ್ಷಣೆಗಾಗಿ ಪ್ರತಿಯೊಬ್ಬರೂ ಕೈಗೊಳ್ಳಬೇಕಾದ ಜವಾಬ್ದಾರಿಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ಡಾ. ಶೋಭಿತ, ಪ್ರಾಂಶುಪಾಲರು, ವಿವೇಕಾನಂದ ಕಾಲೇಜ್ ಆಫ್ ಎಜುಕೇಶನ್, ಪುತ್ತೂರು ಹಾಗೂ ಸತೀಶ್ ಕುಮಾರ್ ರೈ, ಪ್ರಧಾನ ಅಧ್ಯಾಪಕರು, ವಿವೇಕಾನಂದ ಇಂಗ್ಲೀಷ್ ಮೀಡಿಯಂ ಸ್ಕೂಲ್, ಪುತ್ತೂರು, ಗೌರವ ಉಪಸ್ಥಿತರಾಗಿದ್ದರು. ಶಾಲೆಯ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ವಿದ್ಯಾರ್ಥಿನಿಯರಾದ ಆವನಿ ಎಸ್.ವಿ. ಹಾಗೂ ಪೂರ್ವಿ ಬಿ.ಸಿ. ಪ್ರಾರ್ಥನೆ ನೆರವೇರಿಸಿದರು. ಪತ್ರಕರ್ತರಾದ ಸುಧಾಕರ ಸುವರ್ಣ ಅವರು ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಧನುಷ್ ಕಲ್ಲಡ್ಕ ಅವರು ವಂದನಾರ್ಪಣೆ ಸಲ್ಲಿಸಿದರು.