ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ–ಬಾಲಕಿಯರ ಕರಾಟೆ ಪಂದ್ಯಾವಳಿ ಯಶಸ್ವಿ.
ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಪುತ್ತೂರು ಹಾಗೂ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ 2026–27ನೇ ಸಾಲಿನ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ–ಬಾಲಕಿಯರ ಕರಾಟೆ ಪಂದ್ಯಾವಳಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಆಗಸ್ಟ್ ೫ ರಂದು ಅದ್ದೂರಿಯಾಗಿ ನಡೆಯಿತು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಶ್ರೀ ವಿಜಯನಾರಾಯಣ ಎಂ ಅವರು ದೀಪ ಬೆಳಗಿಸುವ ಮೂಲಕ ಪಂದ್ಯಾವಳಿಯನ್ನು ಉದ್ಘಾಟಿಸಿ, ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುತ್ತವೆ ಎಂದು ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಯುತ ಸುರೇಶ್ ಇವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ಅವರು ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಎಲ್ಲರನ್ನು ಅಭಿನಂದಿಸಿ, ಸ್ಪರ್ಧಾಳುಗಳಿಗೆ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ಸೆಲ್ವಿಯ ಕ್ರಾಸ್ತಾ, ಅವರು ಸ್ಪರ್ಧಾಳುಗಳನ್ನು ಉದ್ದೇಶಿಸಿ ಮಾತನಾಡಿ, ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಆತ್ಮವಿಶ್ವಾಸ, ಶಿಸ್ತು ಹಾಗೂ ಆರೋಗ್ಯವನ್ನು ಬೆಳೆಸಿಕೊಳ್ಳುವಂತೆ ಸ್ಪೂರ್ತಿದಾಯಕ ಸಂದೇಶ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರಾದ ಶ್ರೀ ಶಿವಪ್ರಕಾಶ್ ಎಂ ಅವರು ಮಾತನಾಡಿ, ಕರಾಟೆ ಕೇವಲ ಕ್ರೀಡೆಯಲ್ಲ, ಅದು ಆತ್ಮರಕ್ಷಣೆಯ ಕಲೆ ಹಾಗೂ ದೈಹಿಕ–ಮಾನಸಿಕ ಸದೃಢತೆಯನ್ನು ಬೆಳೆಸುವ ಅತ್ಯುತ್ತಮ ಸಾಧನವಾಗಿದೆ . ದೈಹಿಕ ಸಾಮರ್ಥ್ಯವು ದೇಶದ ಪ್ರಗತಿ ಮತ್ತು ಭದ್ರತೆಗೆ ಅತ್ಯಗತ್ಯವಾಗಿದ್ದು, ಸದೃಢ ಯುವಶಕ್ತಿಯ ಮೂಲಕ ಭಾರತವು ವಿಶ್ವಗುರುವಾಗಿ ಹೊರಹೊಮ್ಮಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ವೇದಿಕೆಯಲ್ಲಿ ತಾಲೂಕು ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷರಾದ ಶ್ರೀ ಮತಿ ಪ್ರವೀಣ ರೈ, ತಾಲೂಕು ದೈಹಿಕ ಶಿಕ್ಷಣ ಸಂಘದ ಗ್ರೇಡ್ ೧ ಅಧ್ಯಕ್ಷರಾದ ಶ್ರೀ ಚಕ್ರಪಾಣಿ, ತಾಲೂಕು ದೈಹಿಕ ಶಿಕ್ಷಣ ಸಂಘದ ಗ್ರೇಡ್ 2 ಅಧ್ಯಕ್ಷರಾದ ಶ್ರೀ ಬಾಲಕೃಷ್ಣ ಹಾಗೂ ಜಿಲ್ಲಾ ದೈಹಿಕ ಶಿಕ್ಷಣ ಸಂಘದ ಕಾರ್ಯಾಧ್ಯಕ್ಷರಾದ ಶ್ರೀ ಮಾಮಚನ್, ಶ್ರೀಮತಿ ಶಶಿಕಲಾ ಸಿ ಆರ್ ಪಿ ಹಾಗೂ ಎಮ್ ಸುರೇಶ್ ಕರಾಟೆ ತರಬೇತುದಾರರು ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಸತೀಶ್ ಕುಮಾರ್ ರೈ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಶಾಲೆಯ ಸಂಚಾಲಕರಾದ ಶ್ರೀ ರವಿ ನಾರಾಯಣ ಎಂ ಅತಿಥಿಗಳಿಗೆ ಹೂ ನೀಡಿ ಗೌರವಿಸಿದರು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ನಾಗಭೂಷಣ ಕಿಣಿ ಮತ್ತು ಅದ್ವೈತ್ ರವರು ಪ್ರಾರ್ಥನಾ ಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಮೆರಗು ತಂದರು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಭಾಸ್ಕರ್ ಅವರು ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮವನ್ನು ಶ್ರೀಮತಿ ಸೌಮ್ಯಕುಮಾರಿ ಹಾಗೂ ಶ್ರೀಮತಿ ಪವಿತ್ರ ಅವರು ಅಚ್ಚುಕಟ್ಟಾಗಿ ನಿರೂಪಿಸಿದರು.
ಪಂದ್ಯಾವಳಿಯಲ್ಲಿ ತಾಲೂಕಿನ ವಿವಿಧ ಶಾಲೆಗಳ ನೂರಾರು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಉತ್ತಮ ಸಂಘಟನೆ, ಶಿಸ್ತು ಹಾಗೂ ಕ್ರೀಡಾಸ್ಫೂರ್ತಿಯಿಂದ ಕೂಡಿದ ಈ ಪಂದ್ಯಾವಳಿಯು ಎಲ್ಲರ ಪ್ರಶಂಸೆಗೆ ಪಾತ್ರವಾಗಿ ಯಶಸ್ವಿಯಾಗಿ ಸಂಪನ್ನಗೊಂಡಿತು.